ಆಯುಷ್ಮಾನ್ ಭಾರತ್ ಯೋಜನೆಯಡಿ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನೀಡಬೇಕು : ಕೋಟಾ ಶ್ರೀನಿವಾಸ ಪೂಜಾರಿ

ಆಯುಷ್ಮಾನ್ ಭಾರತ್ ಯೋಜನೆಯಡಿ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನೀಡಬೇಕು : ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು, ಸೆ.17 : ಸಮಾಜದ ಕಟ್ಟಕಡೆಯ ಜನರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನೀಡಬೇಕು, ಈ ಮೂಲಕ ಜನರಲ್ಲಿ ಆತ್ಮಸ್ಥೆರ್ಯ ಮೂಡಿಸುವಂತಹ ಕಾರ್ಯ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಕೋವಿಡ್-19, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ವಿಶೇಷ ಜನ ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಬೇಕು. ಈ ಮೂಲಕ ಹೊಸ ಭರವಸೆ ಹಾಗೂ ಆತ್ಮಸ್ಥೆರ್ಯ ಮೂಡಿಸಬೇಕು. ಇದರಲ್ಲಿ ಏನಾದರೂ ಲೋಪವಾಗಿ ಸಾರ್ವಜನಿಕರಿಂದ ದೂರು ಬಂದರೆ ತಕ್ಷಣ ದಾಖಲೆಗಳನ್ನು ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ರೋಗಕ್ಕೆ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಜಿಲ್ಲೆಯ ಸಾಕಷ್ಟು ಜನರಲ್ಲಿ ಗೊಂದಲಗಳಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಪ್ರತೀ ವಾರ್ಡ್ ಮಟ್ಟದಲ್ಲಿ ಆಶಾ ಕಾರ್ಯಕರ್ತೆ, ಜನಪ್ರತಿನಿಧಿಗಳು, ಸದಸ್ಯರು ಹಾಗೂ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಿದ್ದು, ಈ ತಂಡ ಜನರಿಗೆ ಸೂಕ್ತ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ ಎಂದರು. ಯಾವುದೇ ರೀತಿಯ ಮಾಹಿತಿಯ ಅವಶ್ಯಕತೆ ಇದ್ದರೆ ಆರೋಗ್ಯ ಮಿತ್ರ ಸಹಾಯವಾಣಿಯನ್ನು ಸಂಪರ್ಕಿಸಬೇಕು. ಜೊತೆಗೆ ಈಗಾಗಲೇ ಜಿಲ್ಲಾಡಳಿತ ಎಲ್ಲಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಪ್ರಕಟಿಸಿದ್ದು, ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಕೊರೊನಾ ವಿರುದ್ಧ ಹೋರಾಡಲು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ವೈದ್ಯಾಧಿಕಾರಿಗಳು ಶಕ್ತಿಮೀರಿ ಪ್ರಯತ್ನ ಪಡುತ್ತಿದ್ದು ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್, ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿ.ಇ.ಓ. ಸೆಲ್ವಮಣಿ ಆರ್, ಡಿ.ಸಿ.ಪಿ., ಅರುಣಾಂಶಗಿರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ, ಮೇಯರ್ ದಿವಾಕರ್ ಪಾಂಡೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.