ಸೆ.21 ರಿಂದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ

ಸೆ.21 ರಿಂದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ

ಕಲಬುರಗಿ, ಸೆ.16 : ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಸುರಕ್ಷತಾ ಕ್ರಮದೊಂದಿಗೆ ಇದೇ ಸೆಪ್ಟೆಂಬರ್ 21 ರಿಂದ 28 ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬುಧುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲಬುರಗಿ ಜಿಲ್ಲೆಯ 43 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, 13293 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನಕಲು ತಡೆಯಲು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ನಕಲಿಗೆ ಅವಕಾಶ ನೀಡದೆ ಪರೀಕ್ಷೆಯನ್ನು ಶಾಂತಿಯುತ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದರು. ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಮತ್ತು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ಹಾಜರಿದ್ದು, ವಿದ್ಯಾರ್ಥಿಗಳನ್ನು ಡಿಜಿಟಲ್ ಥರ್ಮೋಮೀಟರ್ನಿಂದ ಪರೀಕ್ಷಿಸಬೇಕು. ಪರೀಕ್ಷೆ ನಡೆಯುವ ಮುನ್ನ ಪರೀಕ್ಷಾ ಕೋಣೆ ಸ್ಯಾನಿಟೈಸ್ ಮಾಡಿಸಬೇಕು. ಹ್ಯಾಂಡ್ ಸ್ಯಾನಿಟೈಸರ್ ಬಳಕೆ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಸಾಮಾಜಿಕ ಅಂತರದೊಂದಿಗೆ ಪರೀಕ್ಷೆ ಬರೆಯಲು ಆಸನ ನಿಗದಿಪಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಜನಸಂದಣಿಯಾಗದಂತೆ ಎಚ್ಚರವಹಿಸಬೇಕು ಎಂದರು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷೆ ಮುನ್ನವೆ ಪರೀಕ್ಷಾ ಕೇಂದ್ರದಲ್ಲಿ ಆಸನ, ಕುಡಿಯುವ ನೀರು, ಸಾಕಷ್ಟು ಬೆಳಕಿನ ಮತ್ತು ಶೌಚಾಲಯ ವ್ಯವಸ್ಥೆ ಬಗ್ಗೆ ಹಾಗೂ ಸುಗಮ ಪರೀಕ್ಷಾ ಸಿದ್ಧತೆಯ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರತ್ಯೇಕ ಮಹಿಳಾ ಮತ್ತು ಪುರುಷ ಪೊಲೀಸರನ್ನು ಫ್ರೀಸ್ಕಿಂಗ್ಗಾಗಿ ನೇಮಿಸಲಾಗುವುದು ಎಂದರು. ಮೋಬೈಲ್ ನಿಷೇಧ: ವಿದ್ಯಾರ್ಥಿಗಳು ಪರೀಕ್ಷೆಗೆ ಬರುವಾಗ ಮೊಬೈಲ್, ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಬ್ಲ್ಯೂಟೂತ್ ಡಿವೈಸ್, ಪೇಜರ್, ವೈರಲೆಸ್, ಕ್ಯಾಲ್ಕುಲೇಟರ್ ಇತರೆ ಮೊದಲಾದ ಉಪಕರಣಗಳು, ಸ್ಲೈಡರೂಲ್, ಮಾರ್ಕರ್, ಲಾಗ್ ಟೇಬಲ್, ವೈಟ್ ಫ್ಲೂಯಿಡ್, ಬ್ಲೇಡ್, ಎರೆಸರ್, ವಾಚ್ ಕ್ಯಾಲ್ಕುಲೇಟರ್, ಪಠ್ಯ ಪುಸ್ತಕ, ನಕಲು ಚೀಟಿಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಡಿಡಿಪಿಐ ಎಸ್.ಪಿ.ಬಾಡಗಂಡಿ ಅವರು ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳನ್ನು ವಿವರಿಸಿದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಇದ್ದರು.