ಜು.30 & 31 ರಂದು ಕೊಪ್ಪಳ ಹಾಗೂ ಗಂಗಾವತಿಯಲ್ಲಿ ಸಿಇಟಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಜು.30 & 31 ರಂದು ಕೊಪ್ಪಳ ಹಾಗೂ ಗಂಗಾವತಿಯಲ್ಲಿ ಸಿಇಟಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಕೊಪ್ಪಳ, ಜು.28 : ಜುಲೈ.30 ಮತ್ತು 31 ರಂದು ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಗಳು ಕೊಪ್ಪಳ ಹಾಗೂ ಗಂಗಾವತಿಯಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಆದೇಶ ಹೊರಡಿಸಿದ್ದಾರೆ. 2020ನೇ ಸಾಲಿನ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಗಳು ಜುಲೈ.30 ಮತ್ತು 31 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 04 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1937ರ ಕಲಂ 144 ರನ್ವಯ ಬೆಳಿಗ್ಗೆ 08 ರಿಂದ ಸಂಜೆ 05 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ, ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರತುಪಡಿಸಿ, ಉಳಿದವರ ಪ್ರವೇಶ ನಿಷೇಧಿಸಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ವಿವರ : 2020ನೇ ಸಾಲಿನ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆಗಳು ಜುಲೈ.30 ಮತ್ತು 31 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 04 ಗಂಟೆಯವರೆಗೆ ಕೊಪ್ಪಳ ಹಾಗೂ ಗಂಗಾವತಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ಕೊಪ್ಪಳ ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಪಿಯು. ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಗವಿಸಿದ್ದೇಶ್ವರ ಪ.ಪೂ ಕಾಲೇಜು ಹಾಗೂ ನವಚೇತನ ಪಿಯು ಸೈನ್ಸ್ ರೆಸಿಡೆನ್ಶಿಯಲ್ ಕಾಲೇಜ್, ಭಾಗ್ಯನಗರ ಮತ್ತು ಗಂಗಾವತಿ ನಗರದ ಬಾಲಕರ ಪ.ಪೂ. ಕಾಲೇಜು ಹಾಗೂ ಬಾಲಕಿಯರ ಎಸ್.ಎಂ.ಎನ್.ಎಂ. ಸರ್ಕಾರಿ ಪಪೂ. ಕಾಲೇಜು ಸೇರಿ ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.