ಜಿಲ್ಲೆಯಲ್ಲಿ ಈ ಬಾರಿ 26 ಸಾವಿರ ಯುವ ಮತದಾರರು ಹೆಸರು ನೋಂದಣಿ: ವೈಶಾಲಿ ಎಂ ಎಲ್

admin Avatar

ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ  ಸಮಿತಿ (ಸ್ವೀಪ್) ವತಿಯಿಂದ ಮತದಾನದ ಮಹತ್ವ ಕುರಿತು ‘ಯುವ ಮತದಾರರಿಂದ ಮಾನವ ಸರಪಳಿ’ ಕಾರ್ಯಕ್ರಮವು ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು.

ಗದಗ ನಗರದ ವಿವಿಧ ಕಾಲೇಜಿನ ನೂರಾರು ಯುವ ಮತದಾರರು ಮಾನವ ಸರಪಳಿ ಪಾಲ್ಗೊಂಡು ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು, ಈ ಬಾರಿ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು  ವಿಶೇಷವಾಗಿದೆ ಎಂದು ತಿಳಿಸಿದರು.

18 ವರ್ಷ ಪೂರ್ಣಗೊಂಡ  ಅರ್ಹ ಮತದಾರರೆಲ್ಲರೂ ಮತದಾನ ಮಾಡುವುದು ಅತಿ ಮುಖ್ಯವಾಗಿದೆ. ಪ್ರತಿ ಮತವೂ ಅಮೂಲ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಚುನಾವಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ 1950 ಅಥವಾ ಸಿವಿಜಲ್ ಆಪ್ ಮೂಲಕ ದೂರು ದಾಖಲಿಸಬಹುದಾಗಿದೆ ಜೊತೆಗೆ ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಅವರು ವಿವರಿಸಿದರು.

ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಯುವ ಮತದಾರರ ಪಾತ್ರ ಹೆಚ್ಚಿನದಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಾಗ ಪ್ರಜಾಪ್ರಭುತ್ವ ಬಲಪಡಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಪ್ರತಿಪಾದಿಸಿದರು.

ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ , ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾ ವಿಧಿ ಬೋಧಿಸಿದರು.  

ಜಿ.ಪಂ.ಸಿಇಒ ಎಸ್.ಭರತ್ ಮಾತನಾಡಿ, ಮೇ 7 ರಂದು ನಡೆಯುವ ಮತದಾನದಂದು ಅರ್ಹರೆಲ್ಲರೂ ಮತ ಚಲಾಯಿಸಬೇಕು. ಅರ್ಹರು ಮತದಾನದಿಂದ ವಂಚಿತರಾಗಬಾರದು ಎಂದು ತಿಳಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಯುವಜನರು ಸಡಗರ-ಸಂಭ್ರಮದಿಂದ ಮತ ಹಕ್ಕು ಚಲಾಯಿಸಬೇಕು. ಪ್ರತಿಯೊಂದು ಮತವೂ ಸಹ ಅತ್ಯಮೂಲ್ಯವಾಗಿದ್ದು  ಜಿಲ್ಲೆಯಲ್ಲಿ  ಶೇಕಡಾವಾರು ಮತದಾನ ಹೆಚ್ಚಳಕ್ಕೆ  ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಕೋರಿದರು.

ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತಾರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ ಮಾತನಾಡಿ, ಯುವ ಜನರು ಯಾವುದೇ ಆಸೆ-ಆಮಿಷಗಳಿಗೆ ತುತ್ತಾಗದೇ ಮತ ಚಲಾಯಿಸಬೇಕು ಎಂದು ಅವರು ಕರೆ ನೀಡಿದರು.

‘ಮತ್ತೊಬ್ಬ ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತಾರಾಷ್ಟ್ರೀಯ ಯೋಗಪಟು ಭೀಮಪ್ಪ ಯಮನಪ್ಪ ಕಬಾಡರ ಮಾತನಾಡಿ, ರಾಷ್ಟ್ರದ ಸುಭದ್ರತೆಗೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಅರ್ಹರೆಲ್ಲರೂ ಕಡ್ಡಾಯವಾಗಿ ಮತ ಹಕ್ಕು ಚಲಾಯಿಸಬೇಕು ಎಂದರು.

ಜಿ.ಪಂ.ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ.ದೇವರಮನಿ, ತಾ.ಪಂ.ಇಒ ಮಾಣಿಕರಾವ್ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶರಣು ಗೋಗೇರಿ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪನ್ಯಾಸಕರು ಇತರರು ಇದ್ದರು.

ಬಾಕ್ಸ್

 ಎಫ್‍ಎಸ್‍ಟಿ ತಂಡದ ಅಧಿಕಾರಿಗಳಿಗೆ ನೋಟೀಸ್

ಗದಗ: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ವಿವಿಧ ವ್ಯಾಪ್ತಿಯ ಎಫ್‍ಎಸ್‍ಟಿ ತಂಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸದಿರುವುದು ಕಂಡುಬಂದಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು 11 ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 134 ಹಾಗೂ ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಗಳು 1966 ರ ಪ್ರಕಾರ  ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ  ವೈಶಾಲಿ ಎಂ.ಎಲ್. ಅವರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *